
ಯುಪಿ ಸರ್ಕಾರದ ವಜಾಕ್ಕೆ ಒತ್ತಾಯ
ಮಡಿಕೇರಿ ಅ.3:- ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನÀಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆಯಾಗಿದ್ದು, ಸ್ಥಳೀಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆಯೆಂದು ಆರೋಪಿಸಿರುವ ಕೆಪಿಸಿಸಿ ವಕ್ತಾರ ಹಾಗೂ ಮಾಹಿತಿ ಹಕ್ಕು ಘಟಕದ ರಾಜ್ಯಾಧ್ಯಕ್ಷ ಎ.ಎಸ್.ಪೊನ್ನಣ್ಣ, ಸರ್ಕಾರವನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರವಿದ್ದರು, ಜನಹಿತ ಕಾಯುವುದಕ್ಕಾಗಿ ಮೊದಲು ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು. ಈ ವಿಚಾರದಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. ತಕ್ಷಣ ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ಮಧ್ಯ ಪ್ರವೇಶ ಮಾಡಿ ಅಲ್ಲಿನ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಒತ್ತಾಯಿಸಿದರು.
ದಲಿತ ಯುವತಿಯ ಮೇಲೆ ನಡೆದ ದೌರ್ಜನ್ಯದಿಂದ ದುಃಖ ತಪ್ತರಾಗಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋಗಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರನ್ನು ಪೊಲೀಸರು ನಿಯಮ ಬಾಹಿರವಾಗಿ ಬಂಧಿಸಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.
::: ಮಸೂದೆ ಸರಿ ಇಲ್ಲ :::
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎರಡು ಕೃಷಿ ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಖಾಸಗೀಕರಣದ ಪ್ರವೇಶಕ್ಕೆ ಆಹ್ವಾನ ನೀಡಿದಂತಾಗಿದೆ. ದೇಶದ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರ ರೈತರ ಹಕ್ಕನ್ನು ಕಸಿದುಕೊಂಡು ಖಾಸಗಿ ವ್ಯಕ್ತಿಗಳ ವಶಕ್ಕೆ ನೀಡುವ ತಂತ್ರ ರೂಪಿಸಿದೆ. ಎರಡು ಮಸೂದೆಗಳಲ್ಲಿಯೂ ರೈತರ ಅಭ್ಯುದಯದ ಬಗ್ಗೆ ಉಲ್ಲೇಖವಿಲ್ಲ. ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಉದ್ದೇಶಕ್ಕಾಗಿ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿರುವ ಅವರು, ಈ ಬಗ್ಗೆ ರೈತರು ಹಾಗೂ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಮತ್ತು ಮಸೂದೆ ವಿರುದ್ಧ ಹೋರಾಟ ರೂಪಿಸಬೇಕು ಎಂದು ತಿಳಿಸಿದರು.
ಒಂದು ವೇಳೆ ಸರ್ಕಾರ ಮಸೂದೆಯನ್ನು ಹಿಂಪಡೆಯದಿದ್ದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರರುಗಳಾದ ಟಾಟು ಮೊಣ್ಣಪ್ಪ, ಮುನೀರ್ ಅಹಮ್ಮದ್, ಟಿ.ಈ.ಸುರೇಶ್ ಹಾಗೂ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಉಪಸ್ಥಿತರಿದ್ದರು.




