
ಮಂಗಳೂರು: ಯುವತಿಗೆ ಮಾರಣಾಂತಿಕ ಹಲ್ಲೆ ನಡೆಸಿದಾತನಿಗೆ 18 ವರ್ಷಗಳ ಕಠಿಣ ಸಜೆ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಲ್ಲದೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಯುವಕನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18 ವರ್ಷ 1 ತಿಂಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನೃತ್ಯ ತರಬೇತಿದಾರನಾಗಿದ್ದ ಶಕ್ತಿನಗರ ನಿವಾಸಿ ಆರೋಪಿ ಸುಶಾಂತ್(31) ಕಾರ್ಕಳದ ನಿಟ್ಟೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿ ಕಾರ್ಕಳ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಅದರಂತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದರಿಂದ ಹತಾಶನಾಗಿದ್ದ ಆರೋಪಿ ಜೈಲಿನಿಂದ ಜಾಮೀನು ಪಡೆದ ಬಳಿಕ 2019ರ ಜೂನ್ 28ರಂದು ಸಂಜೆ 4:30ಕ್ಕೆ ವಿದ್ಯಾರ್ಥಿನಿಯನ್ನು ಕೊಲೆಗೈಯ್ಯುವ ಉದ್ದೇಶದಿಂದ ಸ್ಕೂಟರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ. ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಹಿಂಬದಿಯ ಶಾಂತಿಧಾಮದ ಬಳಿ ತಡೆದು ನಿಲ್ಲಿಸಿದ ಸುಶಾಂತ್, ವಿದ್ಯಾರ್ಥಿನಿ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ ಚೂರಿಯಿಂದ ತಿವಿದು ಗಂಭೀರ ಸ್ವರೂಪದ ಗಾಯಗೊಳಿಸಿದ್ದಾನೆ. ಅಲ್ಲದೆ ಚೂರಿಯಿಂದ ತನ್ನ ಕುತ್ತಿಗೆಯನ್ನೇ ತಿವಿದು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜು.4ರಂದು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಎಸ್ಸೈ ಗುರಪ್ಪಕಾಂತಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ.




