ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.
ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ ಎಂದರು.