ವ್ಯವಸ್ಥಿತವಾಗಿ ಪಿಜಿಸಿಇಟಿ ಪರೀಕ್ಷೆ ನಡೆಸಲು ಎಡಿಸಿ ಮುರಗಿ ಸೂಚನೆ

 

ವಿಜಯಪುರ: ಸೆ. 24 ರಂದು ವಿಜಯಪುರ ನಗರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿರುವ ಎಂಬಿಎ ಮತ್ತು ಎಂಸಿಎ ಕೋರ್ಸುಗಳ ಪಿಜಿಸಿಇಟಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಸೂಚನೆ ನೀಡಿದರು.

ನಗರದ ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಂಬಿಎ ಮತ್ತು ಎಂಸಿಎ ಕೋರ್ಸುಗಳ ಪಿಜಿಸಿಇಟಿ ಪ್ರವೇಶ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಂಸಿಎ 303 ಮತ್ತು ಎಂಬಿಎ 629 ಸೇರಿ ಒಟ್ಟು 932 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಎಂಸಿಎ ಪರೀಕ್ಷೆ ಬೆಳಿಗ್ಗೆ 10:30 ರಿಂದ 12:30 ರವರೆಗೆ ಹಾಗೂ ಎಂಬಿಎ ಪರೀಕ್ಷೆ ಪೂರ್ವಾಹ್ನ 2:30ರಿಂದ ಸಾಯಂಕಾಲ 4:30 ರವರೆಗೆ ಜರುಗಲಿವೆ.
ಜಿಲ್ಲೆಯಲ್ಲಿ ಪರೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನಿಗದಿತ ಕಾಲಾವಧಿಯಲ್ಲಿ ವಿತರಿಸಬೇಕು.ಕೊಠಡಿ ಮೇಲ್ವಿಚಾರಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯ ನಿರ್ವಹಣೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗಿದಂತೆ ನೋಡಿಕೊಳ್ಳಬೇಕು.
ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು, ಮೇಲ್ವಿಚಾರಕರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್, ಎಲೆಕ್ಟ್ರಾನಿಕ್ ಕೈಗಡಿಯಾರ, ಕ್ಯಾಲ್ಕುಲೇಟರ್, ಪೇಜರ್, ಬ್ಲೂಟೂಥ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ತರಬಾರದು. ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳು ಜರುಗಲು ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಕೆ.ಹೊಸಮನಿ,ಜಿಲ್ಲಾ ಖಜಾನೆ ಉಪ ನಿರ್ದೇಶಕರಾದ ಹನಮಂತ ಕಾಲತಿಪ್ಪಿ, ತಹಶೀಲ್ದಾರ ಗ್ರೇಡ್ -2 ಐ.ಎಚ್. ತುಂಬಗಿ, ಕೇಂದ್ರ ಮುಖ್ಯ ಅಧೀಕ್ಷಕರಾದ ಸಿ. ಬಿ. ನಾಟಿಕಾರ, ನಾಗಠಾಣ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಎಚ್.ಡಿ. ಹಳ್ಳಿ, ಕನ್ನೂರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಎಲ್.ಆರ್. ಹಳ್ಳದಮನಿ, ಮುತ್ತಗಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಎಂ.ಪಿ. ಬಿರಾದಾರ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest Indian news

Popular Stories