ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭಕ್ಕೆ ಸಿದ್ಧತೆ

ಹುಬ್ಬಳ್ಳಿ: ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನ ಹಾಗೇ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜತೆ ಜತೆಗೆ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ ಎಂದು ಅವರು ಹೇಳಿದರು.
ಸರಕಾರ ಎಲ್ಲೂ ಮೈಮರೆತಿಲ್ಲ. ಒಂದೆಡೆ ಲಸಿಕಾಕರಣದ ವೇಗ ಹೆಚ್ಚಿಸುತ್ತಲೇ ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ.
ರಾಜ್ಯಾದ್ಯಂತ ಕೋವಿಡ್ ಸೋಂಕಿತರಿಗಾಗಿಯೇ 6,000 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣದಲ್ಲಿ ವೈದ್ಯರು, ನರ್ಸುಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಗ್ರೂಪ್ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರಕಾರದ ಇಬ್ಬರು ಮಕ್ಕಳ ನೀತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಅಭಿವೃದ್ಧಿಗೆ ಪೂರಕವಾಗಿ ಜನಸಂಖ್ಯೆ ಪ್ರಮಾಣ ತಡೆಯಬೇಕಾಗಿದೆ. ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತಿದೆ ಎಂದರು.

Latest Indian news

Popular Stories