ಅಹಮದಾಬಾದ್: ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಜರಾತ್ ಮಾಜಿ ಸಚಿವ ಜಯ್ ನಾರಾಯಣ್ ವ್ಯಾಸ್ ಅವರು ಸೋಮವಾರ (ನವೆಂಬರ್ 28) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅಹಮದಾಬಾದ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ವ್ಯಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ, ಹಿರಿಯ ಮುಖಂಡ ಅಶೋಕ್ ಗೆಹ್ಲೋಟ್ ಅವರು ವ್ಯಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸ್ವಾಗತಿಸಿದರು.
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವ್ಯಾಸ್ ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನವೆಂಬರ್ 5ರಂದು ವ್ಯಾಸ್ ಬಿಜೆಪಿಗೆ ರಾಜೀನಾಮೆ ನೀಡಿದ್ದರು.
182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.