
ಹೊಸ ತಾಲ್ಲೂಕುಗಳಿಗೆ 500 ಕೋಟಿ ಕೊಡಿ
ಬೀದರ್: ಜಿಲ್ಲೆಯಲ್ಲಿ ಹೊಸದಾಗಿ ರಚಿಸಲಾದ ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕುಗಳಿಗೆ ಮೂಲಸೌಕರ್ಯಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ತಲಾ ರೂ. 500 ಕೋಟಿ ಅನುದಾನ ಒದಗಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆಗ್ರಹಿಸಿದ್ದಾರೆ.
ಹೊಸ ತಾಲ್ಲೂಕುಗಳಲ್ಲಿ ಶಾಲೆಗಳಲ್ಲಿ ತಹಶೀಲ್ದಾರ್ ಕಚೇರಿ ತೆರೆದರೂ, ತಾಲ್ಲೂಕು ಪಂಚಾಯಿತಿ, ಶಿಕ್ಷಣ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳು ಇಲ್ಲ. ಹೀಗಾಗಿ ಈ ತಾಲ್ಲೂಕುಗಳ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ತಮ್ಮ ಕೆಲಸ ಕಾರ್ಯಗಳಿಗಾಗಿ ಬಸವಕಲ್ಯಾಣ, ಹುಮನಾಬಾದ್ ಹಾಗೂ ಔರಾದ್ಗೆ ಅಲೆದಾಡುವಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಬಜೆಟ್ನಲ್ಲಿ ಮೂರೂ ತಾಲ್ಲೂಕುಗಳಿಗೆ ಅನುದಾನ ಘೋಷಿಸಬೇಕು. ಆಯಾ ಇಲಾಖೆ ಕಚೇರಿಗಳ ಕಟ್ಟಡ ನಿರ್ಮಿಸಿ, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಹಾಗಾದಲ್ಲಿ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಪರಿಹಾರಗೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದಾರೆ.




