ಬಾದಾಮಿಯಿಂದಲೇ ಸ್ಪರ್ಧಿಸುವೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ನೂರಾರು ಬೆಂಬಲಿಗರು ಮಂಗಳವಾರ ಇಲ್ಲಿನ ಸಿದ್ದರಾಮಯ್ಯ ನಿವಾಸದಲ್ಲಿ ಸೇರಿ, ಕ್ಷೇತ್ರ ಬದಲಾವಣೆ ಮಾಡದಂತೆ ಒತ್ತಾಯಿಸಿದ್ದಾರೆ.
ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಬಾದಾಮಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಬಾದಾಮಿ ಜನತೆ ನನ್ನ ಮೇಲೆ ನಂಬಿಕೆಯಿಟ್ಟು ಆರಿಸಿ ತಂದಿದ್ದಾರೆ. ಅವರನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ನಾನು ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಕೋಲಾರ, ಕೊಪ್ಪಳ, ಚಾಮರಾಜಪೇಟೆ ಹೀಗೆ ಹಲವು ಕ್ಷೇತ್ರಗಳಿಂದ ನನಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಆದರೆ ನನ್ನ ಆಯ್ಕೆ ಬಾದಾಮಿ ಕ್ಷೇತ್ರ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗಲೂ ನಾನು ಸ್ಪಷ್ಟಪಡಿಸಿದ್ದೆ. ಮುಂದಿನ ಚುನಾವಣೆಯಲ್ಲಿಯೂ ನಾನು ಬಾದಾಮಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಘೋಷಣೆ ಬೆನ್ನಲ್ಲೇ ಬೆಂಬಲಿಗರು ಹರ್ಷೋದ್ಘಾರ ವ್ಯಕ್ತಪಡಿಸಿ ಸಂಭ್ರಮಿಸಿದರು.

Latest Indian news

Popular Stories

error: Content is protected !!