ಬೆಂಗಳೂರನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮವಸ್ತ್ರ ಸೇರಿದಂತೆ ಸಣ್ಣಪುಟ್ಟ ವಿಷಯಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ ಎಂದರು.

ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಿ, ಇದೇ ಮಾದರಿಯಲ್ಲಿ ರಾಜ್ಯದ ಇತರ ಪ್ರಮುಖ ನಗರಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.

ಬೆಂಗಳೂರಿನಲ್ಲಿ ಎರಡು ಪ್ರಮುಖ ರಾಜ ಕಾಲುವೆಗಳನ್ನು ೫೦೦ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರಸ್ತುತ ಸ್ಮಾರ್ಟ್‌ ಸಿಟಿ ಯೋಜನೆಯಡಿ ೫೫೦ ಕೋಟಿ ರೂ. ವೆಚ್ಚದಲ್ಲಿ ೧೦ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಇನ್ನುಳಿದ ಕಾಮಗಾರಿಗಳು ಮುಂದಿನ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಲಿವೆ ಎಂದರು.

ಇನ್ನುಳಿದಂತೆ ಕೆಆರ್ ಮಾರ್ಕೆಟ್ ಅಭಿವೃದ್ಧಿಗೆ ೬೦ಕೋಟಿ, ಕಬ್ಬನ್ ಪಾರ್ಕ್ ಅನ್ನು ೪೦ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಯೋಜನೆಯಡಿ ೪೯೩ ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ೪೧೬ ಕೋಟಿ ರೂ. ವೆಚ್ಚ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ. ಹಣಕಾಸು ಇಲಾಖೆ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ತಾವೇ ನಿರ್ವಹಿಸುತ್ತಿರುವುದರಿಂದ ಬೆಂಗಳೂರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತಿದ್ದೇನೆ. ಬೆಂಗಳೂರು ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಸಮಯವನ್ನು ನೀಡಲು ಸಾಧ್ಯವಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Latest Indian news

Popular Stories