ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಕೂಡಲೇ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯೋಗಿ, ಈ ಪ್ರಕರಣದ ತನಿಖೆಗೆ ಮೂವರು ಸದಸ್ಯರ ನ್ಯಾಯಾಂಗ ಆಯೋಗ(ನ್ಯಾಯಾಂಗ ವಿಚಾರಣಾ ಆಯೋಗ) ರಚಿಸುವಂತೆ ಸೂಚನೆ ನೀಡಿದ್ದಾರೆ.
ಜಿಡಿಪಿ ಆರ್‌ಕೆ ವಿಶ್ವಕರ್ಮ ಅವರು ಘಟನೆಯ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿದಂತೆ 17 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಪ್ರಯಾಗ್‌ರಾಜ್‌ನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಪ್ರಯಾಗ್ರಾಜ್ ನಲ್ಲಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗಲೇ ಮೂವರು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.