ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್(74ವರ್ಷ) ಅವರು ಸೋಮವಾರ (ಜನವರಿ 23) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಲಕ್ಷ್ಮಣ್ ಅವರು ಕೆಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದರು ಎಂದು ವರದಿ ತಿಳಿಸಿದೆ.
ಖಳನಟನ ಪಾತ್ರದಿಂದಲೇ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಣ್ ಅವರು ಯಜಮಾನ, ಮಲ್ಲ, ಸೂರ್ಯವಂಶ ಸೇರಿದಂತೆ ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಅಭಿನಯಿಸಿದ್ದರು.
ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್ ಸೇರಿದಂತೆ ಹಲವು ನಟರ ಜೊತೆ ಲಕ್ಷ್ಮಣ್ ನಟಿಸಿದ್ದರು. ಲಕ್ಷ್ಮಣ್ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ನ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆ ಲಕ್ಷ್ಮಣ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.