ಖಾನಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಬೆಳಗಾವಿಯ ಖಾನಾಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 15 ಸಾವಿರ ರೂಗೆ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಗೌರವಧನವನ್ನು 10 ಸಾವಿರ ರೂಗೆ ಹೆಚ್ಚಿಸಲಾಗುವುದು ಎಂದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ. ಹಾಗಾಗಿ ಅವರು ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ, 3 ಲಕ್ಷ ರೂ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ ನೀಡಲಾಗುವುದು. ಕೋವಿಡ್ ಸಂಕಷ್ಟ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 8 ಸಾವಿರ ರೂ, ಬಿಸಿಯೂಟ ನೌಕರರಿಗೆ 5 ಸಾವಿರ ರೂ ಗೌರವಧನ ನೀಡಲಾಗುವುದು’ ಎಂದು ತಿಳಿಸಿದರು.
ತಮ್ಮ ಭಾಷಣದಲ್ಲಿ ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿದ ಪ್ರಿಯಾಂಕಾ, ‘ಈ ಸಭೆಗೆ ಬಂದಿರುವ ಯುವಕರಿಗೆ ಸರ್ಕಾರಿ ನೌಕರಿ ಸಿಕ್ಕಿದೆಯೇ?’ ಎಂದು ಪ್ರಶ್ನಿಸಿದರು. ಆಗ ಯುವಕರು ‘ಕೆಲಸ ಸಿಕ್ಕಿಲ್ಲ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಬಿ.ಇ, ಬಿ.ಟೆಕ್ ವ್ಯಾಸಂಗ ಮಾಡಿದವರಿಗೂ ಕೆಲಸವಿಲ್ಲ. ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಪ್ರತಿ ಹುದ್ದೆ ಭರ್ತಿಗೆ ಸರ್ಕಾರ ಇಂತಿಷ್ಟು ಅಂತಾ ಲಂಚ ನಿಗದಿಪಡಿಸಿದೆ. ಭ್ರಷ್ಟಾಚಾರದಲ್ಲಿ ಮುಳುಗೆದ್ದ ಸರ್ಕಾರ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ವಿತರಿಸುವ ಮೊಟ್ಟೆಯನ್ನೂ ಬಿಟ್ಟಿಲ್ಲ’ ಎಂದು ಹರಿಹಾಯ್ದರು.
ಶಾಸಕರ ಪುತ್ರನೊಬ್ಬನ ಬಳಿ 8 ಕೋಟಿ ರೂ ಸಿಕ್ಕರೂ, ಯಾವುದೇ ಕ್ರಮ ಜರುಗಿಸಲಿಲ್ಲ. ಭ್ರಷ್ಟಾಚಾರದ ಬಗ್ಗೆ ಸರ್ಕಾರಿ ಗುತ್ತಿಗೆದಾರರ ಸಂಘ ಪ್ರಧಾನಿಗೆ ಪತ್ರ ಬರೆದರೂ ಕ್ರಮವಾಗಲಿಲ್ಲ. ನೀವೂ ಇಂತಹ ಸರ್ಕಾರ ಮತ್ತೆ ಐದು ವರ್ಷ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತೀರಾ? ಅಥವಾ ಬದಲಾವಣೆ ಇಚ್ಛಿಸುತ್ತೀರಾ?’ ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿ ವಿಷ್ಣು ನಾಗ್, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಸಂಗಮೇಶ ವಾಲಿ, ಪಿಂಟೂ ಬೆಣ್ಣಿ, ಮಂಗೇಶ ಗುರವ ಇತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.