ಬಿಜೆಪಿ ವಿರುದ್ಧ ಶೆಟ್ಟರ್ ಮಾಸ್ಟರ್ ಸ್ಟ್ರೋಕ್: ಇಬ್ಬರು ಪ್ರಭಾವಿ ಮಾಜಿ ಶಾಸಕರು ಕಾಂಗ್ರೇಸ್ ಸೇರ್ಪಡೆಗೆ ಟೈಮ್ ಫಿಕ್ಸ್!

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ದಿನದಿಂದ ದಿನಕ್ಕೆ ತೀವ್ರ ಕುತೂಹಲ ಮೂಡಿಸಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸೆಟೆದು ನಿಂತಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯ ಅಸಮಾಧಾನಿತ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಕಸರತ್ತು ನಡೆಸುತ್ತಿದ್ದಾರೆ.

ಆಪರೇಷನ್ ಟಾಸ್ಕ್ ನ ಮೊದಲ ಭಾಗವಾಗಿ ಶಿರಹಟ್ಟಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಇಡಲಾಗಿದೆ. ಇಬ್ಬರು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಾಜಿ ಶಾಸಕರಾಗಿದ್ದು, ಟಿಕೆಟ್ ಮಿಸ್ ಆಗಿದ್ದರಿಂದ ರಾಮಪ್ಪ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೇ, ಕುಮಾರಸ್ವಾಮಿ ಅವರು ಕೂಡ ಪಕ್ಷಕ್ಕೆ ಗುಡ್​ಬೈ ಹೇಳಿ ಜೆಡಿಎಸ್​​ಗೆ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಹಾದಿ ತಿಳಿದಿವೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಕಾಂಗ್ರೆಸ್​ ಸೇರ್ಪಡೆಗೆ ನಿರ್ಧರಿಸಿದ್ದರಂತೆ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದಾರೆ. ಇವರಿಬ್ಬರೂ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಆದರೆ, ಯಾವಾಗ ಸೇರುತ್ತಾರೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಹಾಗೆಯೇ, ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿರುವ ಪ್ರಹ್ಲಾದ್ ಜೋಶಿ , ಶೆಟ್ಟರ್ ಅವರ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಹೇಗಾದರೂ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಸೋಲಿಸಿ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಶೆಟ್ಟರ್, ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಚಿಕ್ಕನಗೌಡರ್‌ ಅವರನ್ನು ಸೆಳೆದು ಧಾರವಾಡದಲ್ಲಿ ಪ್ರಹ್ಲಾದ್‌ ಜೋಶಿ ಅವರ ವರ್ಚಸ್ಸನ್ನು ಕುಗ್ಗಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ ಎನ್ನಲಾಗಿದೆ.

ಚಿಕ್ಕನಗೌಡರ್‌ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಧಾರವಾಡ ಜಿಲ್ಲೆಯಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ. ಇವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಕಾಂಗ್ರೆಸ್‌ ಲಿಂಗಾಯತ ಮತ ಬ್ಯಾಂಕ್‌ಗೆ ಕೈಹಾಕಲು ತಂತ್ರ ರೂಪಿಸಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದೆ.

Latest Indian news

Popular Stories