ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.
ಅಲ್ಲದೇ ಯುಪಿ ಭದ್ರಕೋಟೆ ಗೊಂಡಾದಲ್ಲಿ ಪ್ರಾರಂಭವಾಗಬೇಕಿದ್ದ ಓಪನ್ ಚಾಂಪಿಯನ್‌ಶಿಪ್ ನ್ನು ಸಚಿವಾಲಯವು ರದ್ದುಗೊಳಿಸಿದೆ. ಶೀಘ್ರದಲ್ಲೇ ರಚನೆಯಾಗಲಿರುವ ಸಚಿವಾಲಯದ ಉಸ್ತುವಾರಿ ಸಮಿತಿಯು ಭಾರತೀಯ ಕುಸ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ತಡರಾತ್ರಿ ನಡೆದ ಸರಣಿ ಸಭೆಯಲ್ಲಿ ಮಾತನಾಡಿದ್ದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ಸೇರಿದಂತೆ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಉಸ್ತುವಾರಿ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.