ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ಥೆಯರು

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಇಬ್ಬರು ಮಹಿಳೆಯರು ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಲೈವ್ ಕಾನೂನಿನ ಪ್ರಕಾರ ತಮ್ಮ ಗುರುತನ್ನು ಗೌಪ್ಯವಾಗಿಡಬೇಕೆಂದು ವಿನಂತಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಇಂದು ಅರ್ಜಿಯ ವಿಚಾರಣೆ ನಡೆಸಲಿದೆ.

ಕಲಹ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರ ಮಾಡಿರುವ ಮನವಿಯನ್ನು ಕೂಡ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಮಣಿಪುರದಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಜುಲೈ 20 ರಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ಘಟನೆಯು ಬಹುದೊಡ್ಡ ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬಣ್ಣಿಸಿದೆ. 

ಇದಕ್ಕೆ ಕೇಂದ್ರ ಸರ್ಕಾರ ಗುರುವಾರ ಉತ್ತರ ಸಲ್ಲಿಸಿದ್ದು, ಘಟನೆಯನ್ನು ಸಿಬಿಐ ತನಿಖೆಗೆ ವರ್ಗಾಯಿಸಲಾಗಿದೆ ಮತ್ತು ವಿಚಾರಣೆ ಸೇರಿದಂತೆ ಘಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಮಣಿಪುರದಿಂದ ಹೊರಗೆ ಯಾವುದೇ ರಾಜ್ಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ‘ರಾಜ್ಯ ಸರ್ಕಾರದ ಒಪ್ಪಿಗೆಯೊಂದಿಗೆ ಕೇಂದ್ರ ಸರ್ಕಾರವು ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ಅಂದರೆ ಸಿಬಿಐಗೆ ವಹಿಸುವ ನಿರ್ಧಾರ ತೆಗೆದುಕೊಂಡಿದೆ’ ಎಂದು ಹೇಳಿದರು.

Latest Indian news

Popular Stories