ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರಿಗೆ ತನಿಖಾ ವರದಿ ಸಲ್ಲಿಸಲು ಆದೇಶ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ ಪ್ರಕರಣದಲ್ಲಿ ಸಹಾಯಕ ಪೊಲೀಸ್ ಆಯುಕ್ತೆ (ಎಸಿಪಿ) ಎಂ ಸಿ ಕವಿತಾ ಅವರು ಸಿದ್ಧಪಡಿಸಿರುವ ವರದಿಯನ್ನು ಸೂಕ್ತ ಆದೇಶಕ್ಕಾಗಿ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರಿಗೆ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಸಂತ್ರಸ್ತೆಯಾಗಿರುವ ಯುವತಿಯು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ಹೇಳಿದೆ.

ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳ ಪೈಕಿ ಎಸ್ಐಟಿ ಸಿಂಧುತ್ವವನ್ನು ಪ್ರಶ್ನಿಸಿರುವ ಮತ್ತು ನ್ಯಾಯಾಲಯದ ನಿಗಾವಣೆಯಲ್ಲಿ ಎಸ್ಐಟಿ ರಚಿಸಿ ಅದರ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

“ಮಾರ್ಚ್ 29ರಂದು ಬೆಂಗಳೂರು ಪೊಲೀಸ್ ಆಯುಕ್ತರು ಸಂತ್ರಸ್ತೆಯ ದೂರಿಗೆ ಸಂಬಂಧಿಸಿದಂತೆ ಸಿಆರ್ಪಿಸಿ ಸೆಕ್ಷನ್ 173ರ ಅಡಿ ಎಸಿಪಿ ಕವಿತಾ ಅವರಿಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿದ್ದರು.

ಇದರ ಅನ್ವಯ ಅವರು ತನಿಖೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿ ಅದೇ ಸ್ಥಿತಿಯಲ್ಲಿ ಇಡಲಾಗಿದೆ. ಐಪಿಎಸ್ ಅಧಿಕಾರಿ ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ ಬಳಿಕ, ಕವಿತಾ ಅವರು ಸಿದ್ಧಪಡಿಸಿದ ವರದಿಯನ್ನು ಎಸ್ಐಟಿಯ ಮುಂದೆ ಮಂಡಿಸಬೇಕಾಗಿತ್ತು ಎಂಬುದು ನಮ್ಮ ಸ್ಪಷ್ಟ ಅಭಿಪ್ರಾಯವಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

Latest Indian news

Popular Stories

error: Content is protected !!