ಹಗರಿಬೊಮ್ಮನಹಳ್ಳಿ: ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೂಮಳೆ ಸುರಿಸಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.
ನಂತರ ಮಾಲವಿ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಲಾಶಯಕ್ಕೆ ನೀರು ತುಂಬಿಸಲು 160 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರದ ಪ್ರಯತ್ನದ ಫಲವಾಗಿ 50 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ ಎಂದರು.
ಇದಕ್ಕೂ ಮುನ್ನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ, ಮುಂಬರುವ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಇದ್ದು, ಈ ಬಾರಿ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.
ಯಾರೇ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಇನ್ನೇನಾದರೂ ಅವರು ಹೇಳಿಕೊಳ್ಳಲಿ ಸ್ವಂತ ಬಲದ ಮೇಲೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಚುನಾವಣೆಯಲ್ಲಿ ಗೆಲ್ಲಲಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ಅಂತಿಮವಾಗಿ ಮತದಾರರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.