ವಿದ್ಯುನ್ಮಾನ ಮತ ಯಂತ್ರಗಳ ಹಂಚಿಕೆ ಪ್ರಕ್ರಿಯೆ: ಆಯಾ ಮತಕ್ಷೇತ್ರಗಳಿಗೆ ನಾಳೆ ಇವಿಎಂ ರವಾನೆಗೆ ಕ್ರಮ: ದಾನಮ್ಮನವರ

ವಿಜಯಪುರ: ಪ್ರಸಕ್ತ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.10 ರಂದು ನಡೆಯುವ ಮತದಾನಕ್ಕಾಗಿ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದು,ಆಯಾ ವಿಧಾನಸಭಾ ಕ್ಷೇತ್ರವಾರು ಮತ ಯಂತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಕಂಪ್ಯೂಟರೀಕೃತ ರ‌್ಯಾಂಡಮೈಜೇಶನ್ ಪ್ರಕ್ರಿಯೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ವಿವಿಧ ರಾಜಕೀಯ ಪ್ರತಿನಿಧಿಗಳ ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪ್ರಥಮ ರ‌್ಯಾಂಡಮೈಜೇಶನ್ ಪ್ರಕ್ರಿಯೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು, ವಿಜಯಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ಎಲ್ಲ ಮತಯಂತ್ರಗಳು ಹಾಗೂ ವಿವಿ ಪ್ಯಾಟ್‍ಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಪರಿಶೀಲಿಸಿ, ಜಿಪಂ ರಸ್ತೆಯಲ್ಲಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿತ್ತು. ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 241, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ 252, ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ 232, ಬಬಲೇಶ್ವರ ಮತಕ್ಷೇತ್ರದಲ್ಲಿ 243, ಬಿಜಾಪೂರ ನಗರ ಮತಕ್ಷೇತ್ರದಲ್ಲಿ 269, ನಾಗಠಾಣ ಮತಕ್ಷೇತ್ರದಲ್ಲಿ 296, ಇಂಡಿ ಮತಕ್ಷೇತ್ರದಲ್ಲಿ 268, ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ 271 ಮತಗಟ್ಟೆಗಳು ಸೇರಿದಂತೆ ಒಟ್ಟು 2072 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಮತಗಟ್ಟೆಗಳ ಸಂಖ್ಯೆಗೆ ಅನುಗುಣವಾಗಿ ಎಲ್ಲ ವಿದ್ಯುನ್ಮಾನ ಮತಯಂತ್ರಗಳು ಹಾಗೂ ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಸಂಖ್ಯೆಯಲ್ಲಿ ಹೆಚ್ಚುವರಿ ಮತ ಯಂತ್ರಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಸಾರ್ವಜನಿಕರಲ್ಲಿ ಮತ ಯಂತ್ರಗಳ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮಗಳಿಗೆ ಒಟ್ಟು 207 ಮತ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದರು.

ತರಬೇತಿಗಾಗಿ ಬಳಸುವ 207 ಮತ ಯಂತ್ರಗಳನ್ನು ಹೊರತುಪಡಿಸಿ,ಇತರೆ ಮತ ಯಂತ್ರಗಳನ್ನು ಕ್ಷೇತ್ರಗಳಿಗೆ ಹಂಚಲು ರ‌್ಯಾಂಡ್‍ಮೈಜೇಶನ್ ಮಾಡಲಾಗುತ್ತಿದೆ. ನಂತರದ ದಿನಗಳಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಆಯಾ ಕ್ಷೇತ್ರದಲ್ಲಿ ಮತ್ತೊಮ್ಮೆ ರ‌್ಯಾಂಡ್‍ಮೈಜೇಶನ್ ಪ್ರಕ್ರಿಯೆ ಕೈಗೊಂಡು, ಮತಗಟ್ಟೆವಾರು ಮತಯಂತ್ರಗಳನ್ನು ಹಂಚಿಕೆ ಮಾಡಲಿದ್ದಾರೆ. ಮತಯಂತ್ರಗಳನ್ನು ಬಿಗಿ ಪೊಲೀಸ್ ಬಂದೋಬಸ್ತನಲ್ಲಿ ವಾಹನಗಳ ಮೂಲಕ ಆಯಾ ತಾಲೂಕು ಕೇಂದ್ರಗಳಿಗೆ ಸಾಗಿಸಿ, ಆಯಾ ತಾಲೂಕು ಕೇಂದ್ರದಲ್ಲಿ ಮತಯಂತ್ರಗಳನ್ನು ಭದ್ರತಾ ಕೊಠಡಿಗಳಲ್ಲಿ ಸಂಗ್ರಹಿಸಿಡಲಾಗುವುದು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಹಾಗೂ ಬಿಜಾಪೂರ ವಿಧಾನ ಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲೆಯ ಎಲ್ಲಾ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳು ಪಾಲ್ಗೊಂಡಿದ್ದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವಿದ್ಯುನ್ಮಾನ ಮತಯಂತ್ರಗಳ ರ‌್ಯಾಂಡ್‍ಮೈಜೇಶನ್ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.

Latest Indian news

Popular Stories