ಸಂತೆಕಟ್ಟೆ ಒವರ್’ಪಾಸ್’ಗೆ ಶಿಲಾನ್ಯಾಸ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ರೂ. ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು, ಶೀಘ್ರವಾಗಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಅವರು ಗುರುವಾರ ಉಡುಪಿ ಭೇಟಿ ಸಂದರ್ಭದಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

“ಪ್ರತಿ ದಿನ 4500ಕ್ಕೂ ಅಧಿಕ ವಾಹನಗಳು ಇಲ್ಲಿ ಸಂಚರಿಸುತ್ತಿವೆ. ಇದನ್ನು ಪ್ರಮುಖ ಬ್ಲಾಕ್ ಸ್ಪಾಟ್ ಆಗಿ ಗುರುತಿಸಲಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್ ಪಾಸ್ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿತ್ತು ಎಂದರು.

ಈ ಕಾಮಗಾರಿಯನ್ನು ದಿನದಲ್ಲಿ 3 ಪಾಳಿಯಂತೆ ಕಾರ್ಯ ನಿರ್ವಹಿಸಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಸೂಚಿಸಿದ ಸಚಿವೆ, ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿ ಯಲ್ಲಿ ಸಹ 22 ಕೋಟಿ ರೂ. ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.

ಸಂತೆಕಟ್ಟೆಯಲ್ಲಿ ಕಾಮಗಾರಿ ಮುಕ್ತಾಯವಾಗುವವರೆಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ತಿಳಿಸಿದರು.

Latest Indian news

Popular Stories