ಸತತ ಮಳೆ: ಉಡುಪಿ, ಶಿವಮೊಗ್ಗದಲ್ಲಿ ಶುಕ್ರವಾರ ರಜೆ ಘೋಷಣೆ

ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ಇತ್ತ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ ಮತ್ತು ಪದವಿ ವಿಭಾಗದ ಕಾಲೇಜುಗಳಿಗೆ ಮೇ, 20 ಶುಕ್ರವಾರ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:20.05.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಸರ್ಕಾರಿ, ಖಾಸಗಿ, ಮತ್ತು ಪದವಿ ಪೂರ್ವ ಇಲಾಖೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರವೂ ನಿರಂತರವಾಗಿ ಮಳೆ ಸುರಿದಿದ್ದು, ಶುಕ್ರವಾರ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಮೊಗ್ಗ ಶಾಲೆಗಳಿಗೂ ರಜೆ:
ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Latest Indian news

Popular Stories