ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.
ದೇಶದ ಕಲೆ, ಸಂಸ್ಕೃತಿ, ಸೇನಾ ಸಾಮರ್ಥ್ಯವನ್ನು ದೇಶ ಮತ್ತು ಜಗತ್ತಿನ ಮುಂದೆ ತೆರೆದಿಡುವ 74ನೇ ಗಣರಾಜ್ಯೋತ್ಸವಕ್ಕೆ ದೆಹಲಿಯ ರಾಜಪಥ ಸಜ್ಜಾಗಿದೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯ ದಿನವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.