Featured StoryState News

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ. ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ರೂ,2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.

ಭೀಕರ ಬರಗಾಲ ಹಿನ್ನೆಲೆ ಬರಪೀಡಿತ ತಾಲೂಕುಗಳನ್ನ ಘೋಷಿಸಲಾಗಿದೆ. 223 ತಾಲೂಕು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪೈಕಿ 196 ತೀವ್ರ ಬರಪೀಡಿತ ತಾಲೂಕುಗಳಿವೆ. ರಾಜ್ಯ ಸರ್ಕಾರ NDRFನಿಂದ ಅನುದಾನ ಕೋರಿದೆ. ಪ್ರತಿ ರೈತನ ಖಾತೆಗೆ 2 ಸಾವಿರ ರೂ. ಪರಿಹಾರ ಹಾಕಲಾಗುತ್ತೆ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಮನ್ರೇಗಾ ಯೋಜನೆಯಡಿ ಕೆಲಸ ಒದಗಿಸಲಾಗಿದೆ. 63.13 ಲಕ್ಷ ಜನರಿಗೆ ಕೆಲಸವನ್ನ ಒದಗಿಸಲಾಗಿದೆ. 72.38 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ರಾಜ್ಯದಲ್ಲಿರುವ ಡಯಾಲಿಸಿಸ್​ ಕೇಂದ್ರಗಳ ವಿಸ್ತರಣೆ ಮಾಡಲಾಗಿದೆ. 168 ಇದ್ದ ಡಯಾಲಿಸಿಸ್​ ಕೇಂದ್ರ 219ಕ್ಕೆ ಹೆಚ್ಚಳವಾಗಿದೆ. ಆರೋಗ್ಯ ಕವಚ ಯೋಜನೆಯಡಿ ಹೊಸದಾಗಿ 262 ಆ್ಯಂಬುಲೆನ್ಸ್​​ಗಳು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ​ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button