ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ; ಬಿಜೆಪಿ ಪ್ರಧಾನ ಕಚೇರಿ ಬಳಿ ಭದ್ರತೆ ಹೆಚ್ಚಳ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬಿಜೆಪಿ ಕಚೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಎಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸೆಂಟ್ರಲ್ ದೆಹಲಿಗೆ ತೆರಳುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲು ಪೊಲೀಸರು ಪ್ರಯಾಣಿಕರಿಗೆ ವಿನಂತಿ ಮಾಡಿದ್ದಾರೆ. ಕೇಂದ್ರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಮತ್ತು ಇ.ಡಿ ಕಚೇರಿಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ.

ಕೇಜ್ರಿವಾಲ್ ಬಂಧನವನ್ನು ಖಂಡಿಸಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿ ಬಳಿಗೆ ಆಗಮಿಸಿ ಪ್ರತಿಭಟನೆ ಆರಂಭಿಸುವಂತೆ ಆಪ್ ನಾಯಕರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ದೆಹಲಿಯ ಎಲ್ಲಾ ಶಾಸಕರು ಮತ್ತು ಕೌನ್ಸಿಲರ್‌ಗಳು ಬಿಜೆಪಿ ಪ್ರಧಾನ ಕಚೇರಿ ಬಳಿಯಲ್ಲಿ ಸೇರಲು ಸೂಚಿಸಲಾಗಿದೆ ಮತ್ತು ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಪ್ರತಿಭಟಿಸಲು ಹೆಚ್ಚಿನ ಸಂಖ್ಯೆಯ ಜನರು ಬೀದಿಗಿಳಿಯಲಿದ್ದಾರೆ ಎಂದು ಪಕ್ಷ ನಿರೀಕ್ಷಿಸುತ್ತದೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಎಎಪಿ ಕಾರ್ಯಕರ್ತರು ನೆರೆಯ ರಾಜ್ಯಗಳಿಂದ ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ದೆಹಲಿಯ ಗಡಿಗಳಲ್ಲಿ ಈಗಾಗಲೇ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

ಗುರುವಾರ ರಾತ್ರಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

Latest Indian news

Popular Stories