ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ಮಹತ್ವದ ಸರ್ವಪಕ್ಷ ಸಭೆ ನಡೆಸಿದೆ.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದಲ್ಲಿ ಸೇನೆ ದೇಶದ ಆಡಳಿತವನ್ನು ತನ್ನ ತೆಕ್ಕೆಗೆ ಸ್ವಾಧೀನಪಡಿಸಿಕೊಂಡಿರುವ ವಿದ್ಯಮಾನಗಳ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.
ಎಲ್ಲ ಪಕ್ಷಗಳ ಸಂಸದರೊಂದಿಗೆ ಜೈ ಶಂಕರ್ ಮಹತ್ವದ ಚರ್ಚೆ ನಡೆಸಿದ್ದು, ಹಿಂಸಾಚಾರ ಪೀಡಿತ ಬಾಂಗ್ಲಾದೇಶ ಪರಿಸ್ಥಿತಿ ಮತ್ತು ಭಾರತ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜೈಶಂಕರ್ ಎಲ್ಲಾ ಪಕ್ಷಗಳ ನಾಯಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಜೈಶಂಕರ್ ಅವರಲ್ಲದೆ ಈ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಸಂಪುಟದ ಪ್ರಮುಖ ಸಚಿವರು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.
ಶೇಖ್ ಹಸೀನಾ ಅವರು ನಿನ್ನೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಅವರ ಅರಮನೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು ಮಿಲಿಟರಿ “ಮಧ್ಯಂತರ ಸರ್ಕಾರ” ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಲ್ಲದೆ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಇನ್ನು ಬಾಂಗ್ಲಾದೇಶ ಹಿಂಸಾಚಾರದಲ್ಲಿ ಈ ವರೆಗೂ 300 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ.