ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಆರೋಪ | ಎಸ್​ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ – ಬಿಜೆಪಿ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ (Prajwal Revanna sex scandal) ವಿಚಾರ ರಾಜ್ಯದಲ್ಲಿ ರಾಜಕೀಯ ಜಂಗೀಕುಸ್ತಿಗೆ ಎಡೆ ಮಾಡಿಕೊಡುತ್ತಿದೆ. ಮೇ 7ರಂದು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿ ಇರುವುದರಿಂದ ಜೆಡಿಎಸ್ ಮಿತ್ರ ಪಕ್ಷವಾಗಿ ಬಿಜೆಪಿಗೆ ಈ ವಿಚಾರ ಮಗ್ಗುಲ ಮುಳ್ಳಾಗುತ್ತಿರುವಂತೆ ತೋರುತ್ತಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆದರೂ ಪಕ್ಷದಿಂದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು, ಈ ಬಗ್ಗೆ ಪ್ರಕ್ರಿಯಿಸಿರುವ ಬಿಜೆಪಿಯ ಕೆಲ ನಾಯಕರು, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಪಕ್ಷ ನಾಯಕ ಆರ್. ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್​ಐಟಿ ರಚಿಸಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್ ಹೇಳಿದ್ದಾರೆ. ಇನ್ನು, ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಸ್​ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ ಎನ್ನುವುದು ಬಿಜೆಪಿ ಭಾವನೆ: ಸಿಟಿ ರವಿ
ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಸಿ.ಟಿ. ರವಿ, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದಿದ್ದಾರೆ.

ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದು ಹೇಳಿದ ಸಿ.ಟಿ. ರವಿ, ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2019ರಲ್ಲಿ ಹಾಸನದಲ್ಲಿ ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್’ ಎಂದು ಹುಬ್ಬಳ್ಳಿಯಲ್ಲಿ ಸಿ.ಟಿ. ರವಿ ಹೇಳಿದ್ದಾರೆ.

Latest Indian news

Popular Stories