ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಕ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು!

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದ 76 ವರ್ಷದ ಹಸೀನಾ ವಿರುದ್ಧ ಮೊಟ್ಟಮೊದಲ ಬಾರಿಗೆ ಪ್ರಕರಣ ದಾಖಲಾಗಿದೆ.

ಮೊಹಮ್ಮದ್‌ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು. ಅವರ ಹಿತೈಷಿ ಈ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಅವಾಮಿ ಲೀಗ್‌ನ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್, ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್ ಮತ್ತು ಮಾಜಿ ಪೊಲೀಸ್ ಮಹಾನಿರೀಕ್ಷಕ ಚೌಧರಿ ಅಬ್ದುಲ್ಲಾ ಅಲ್ ಮಾಮುನ್ ಇತರ ಆರೋಪಿಗಳಾಗಿದ್ದಾರೆ. ಅಲ್ಲದೆ ಹಲವಾರು ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆಗಸ್ಟ್ 5 ರಂದು ಹಸೀನಾ ಸರ್ಕಾರದ ಪತನದ ನಂತರ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ ಬಾಂಗ್ಲಾದೇಶದಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಜುಲೈ ಮಧ್ಯದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಗಳು ಮೊದಲ ಬಾರಿಗೆ ಪ್ರಾರಂಭವಾದಾಗಿನಿಂದ ಸಾವಿನ ಸಂಖ್ಯೆ 560 ಕ್ಕೆ ತಲುಪಿದೆ. ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಗಿದೆ. ಮೊಹಮ್ಮದ್ ಯೂನಸ್ ಕಳೆದ ವಾರ ತಮ್ಮ 16 ಸದಸ್ಯರ ಸಲಹೆಗಾರರ ​​​​ ಖಾತೆಗಳನ್ನು ಘೋಷಿಸಿದರು.

Latest Indian news

Popular Stories