
ಬೀದರ್ | ನಗರದಲ್ಲಿ ಅತಿಥಿ ಉಪನ್ಯಾಸಕರಿಂದ ಪಂಜಿನ ಮೆರವಣಿಗೆ | ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಬೀದರ್: ಕೆಲಸ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಪನ್ಯಾಸಕರು ನಗರದಲ್ಲಿ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.
ನಗರದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಭಗತ್ ಸಿಂಗ್ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು. ಮಾರ್ಗದುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಸ ಕಾಯಂಗೊಳಿಸಬೇಕೆಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರು ರಾಜ್ಯದಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 24ನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರ ಇದುವರೆಗೆ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದರೆ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಈಗ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಅನೀಲಕುಮಾರ ಶಿಂಧೆ, ಪ್ರಮುಖರಾದ ಬಸವರಾಜ ಸೇರಿ, ಚಂದ್ರಕಾಂತ, ಬಾಲಾಜಿ, ಧನರಾಜ ತುಡಮೆ, ಬಂಡಯ್ಯ ಸ್ವಾಮಿ, ವೆಂಕಟ್ ಜಾಧವ ಸೇರಿದಂತೆ ನೂರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
ವರದಿ : ಹನಮಂತ ದೇಶಮುಖ
THG ಬೀದರ್




