ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಮೈಸೂರು ಚಲೋ ನಿಗದಿಯಂತೆ ಶನಿವಾರ ಆರಂಭ ವಾಗಲಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಹಿತ ಎಲ್ಲ ನಾಯಕರೂ ಪಾಲ್ಗೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.
ಪಾದಯಾತ್ರೆಯಿಂದ ಹೆಜ್ಜೆ ಹಿಂದಿರಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ವರಿಷ್ಠರು ಯಶಸ್ವಿಯಾಗಿದ್ದು, ಶನಿವಾರ ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಕೆಂಗೇರಿ ಸಮೀಪದ ಕೆಂಪಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ನೆರ ವೇರಿಸಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ. 10ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಗುರುವಾರ ಹೊಸದಿಲ್ಲಿಯಲ್ಲಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಸ್ತೃತ ಚರ್ಚೆ ನಡೆಸಿ ಜಂಟಿ ಪಾದಯಾತ್ರೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರೀತಂಗೌಡರನ್ನು ಪಾದಯಾತ್ರೆಯಿಂದ ಹೊರಗಿಡಲು ಜೆಡಿಎಸ್ ಷರತ್ತು ವಿಧಿಸಿದ್ದು, ಇದಕ್ಕೆ ಬಿಜೆಪಿ ಸಮ್ಮತಿಸಿದೆ.