ಶಿವಮೊಗ್ಗ: ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಲು ಕರೆ ಬಂದಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವುದಕ್ಕೆ ಆತುರವಿಲ್ಲ. ಆದರೆ ಚರ್ಚೆಗಳ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವರು ತಿಳಿಸಿದ್ದಾರೆ. “ಕೆಲವು ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿದರು, ಪಕ್ಷಕ್ಕೆ ಮರಳಲು ಕೇಳಿದರು, ನಾನು ಇನ್ನೂ ನಿರ್ಧರಿಸಿಲ್ಲ,” ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಈಶ್ವರಪ್ಪ ಪಕ್ಷದ ವಿರುದ್ಧ ಬಂಡಾಯವೆದ್ದು, ಪಕ್ಷದ ಹೈಕಮಾಂಡ್ ನಿರ್ದೇಶನವನ್ನು ಕಡೆಗಣಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪರಾಭವಗೊಂಡಿದ್ದರು.
ಉಪಮುಖ್ಯಮಂತ್ರಿ, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಉಚ್ಛಾಟಿತ ನಾಯಕ, ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್‌ಗೆ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನಗೊಂಡಿದ್ದರು.
ಕರ್ನಾಟಕದಲ್ಲಿ ಬಿಜೆಪಿಯನ್ನು ‘ರಾಜವಂಶೀಯ ಪಕ್ಷ’ವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಇಬ್ಬರು ಮಕ್ಕಳಾದ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದರು.