Featured StoryState News

ಕೋರೊನಾ ಮೂರನೇ ಅಲೆ: ಸಿ.ಎಮ್ ಇಂದು ಸಭೆ!

ಬೆಂಗಳೂರು:ಕೋವಿಡ್ 3ನೇ ಅಲೆ ನಿರ್ವಹಣೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಜ್ಞರು, ಉನ್ನತಾಧಿಕಾರಿಗಳು ಭಾಗವಹಿಸಲಿದ್ದಾರೆ. ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.

ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬೊಮ್ಮಾಯಿಯವರು ಬೆಂಗಳೂರು ಸೇರಿದಂತೆ ಜಿಲ್ಲೆಗಳಿಗೆ ಕೊರೋನಾ ಮೂರನೇ ಅಲೆಯನ್ನು ಆರಂಭದಲ್ಲಿಯೇ ನಿಯಂತ್ರಿಸಲು ಹೊಸ ನಿಯಮಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ವಾರಾಂತ್ಯ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ:

ಮೊದಲಿಗೆ ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ಸೇರಿದಂತೆ ಹಂತಹಂತವಾಗಿ ನಿರ್ಬಂಧಗಳನ್ನು ಬೆಂಗಳೂರಿನಲ್ಲಿ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಇನ್ನು ಕೆಲದಿನಗಳವರೆಗೆ ಬೆಂಗಳೂರು ವಾರಾಂತ್ಯಗಳಲ್ಲಿ ಲಾಕ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ.

ನಿನ್ನೆ ಉಡುಪಿಯಲ್ಲಿ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಸ್ವಾತಂತ್ರ್ಯ ದಿನಾಚರಣೆ ನಂತರ ಬೆಂಗಳೂರಿನಲ್ಲಿ ಹೆಚ್ಚಿನ ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದ್ದು ಲಾಕ್ ಡೌನ್ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
ನಾವು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ವಿವರವಾಗಿ ಚರ್ಚೆಯನ್ನು ನಡೆಸಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ.

ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮೂರನೇ ಅಲೆಯನ್ನು ತಡೆಗಟ್ಟಲು ನಾವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಈಗ ಶ್ರಾವಣ ಮಾಸವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಬರುವುದರಿಂದ ಜನಸಂದಣಿಯನ್ನು ನಿರ್ಬಂಧಿಸುವಂತಹ ಮಾರ್ಗಸೂಚಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ. ಹಾಗೆಂದು ಲಾಕ್ ಡೌನ್ ಕೊರೋನಾ ನಿಯಂತ್ರಣಕ್ಕೆ ಪರಿಹಾರವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ ಎಂದು ಕೂಡ ಹೇಳಿದ್ದಾರೆ.

ಲಾಕ್ ಡೌನ್ ಹೇರಿದರೆ ಜನರಿಗೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಇತರ ಸಂಭವನೀಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯದ ಮಕ್ಕಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಯಾವುದೇ ತೀವ್ರ ಏರಿಕೆಯಾಗಿಲ್ಲ ಎಂದು ಕೂಡ ಸಿಎಂ ಹೇಳಿದ್ದಾರೆ.”ಆದಾಗ್ಯೂ, ಸರ್ಕಾರವು ಹೊಸ ಮಕ್ಕಳ ಆಸ್ಪತ್ರೆಗಳ ಸ್ಥಾಪನೆ ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡುವುದು ಸೇರಿದಂತೆ ಮೂಲಸೌಕರ್ಯವನ್ನು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದಲ್ಲಿವೆ ಎಂದು ಕಂದಾಯ ಸಚಿವ ಅಶೋಕ ಹೇಳಿದ್ದಾರೆ. ಆದರೆ ಎಲ್ಲಾ ಜಿಲ್ಲೆಗಳ ಉಪ ಆಯುಕ್ತರಿಗೆ ಕೊರೋನಾ ಹೆಚ್ಚಳ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಕೇವಲ ಗಡಿ ಜಿಲ್ಲೆಗಳ ಪರಿಸ್ಥಿತಿಯತ್ತ ಗಮನ ಹರಿಸುವುದರ ಜೊತೆಗೆ ಬೆಂಗಳೂರಿನಲ್ಲಿ ಕೋವಿಡ್ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗಳಿಂದ ಬೆಂಗಳೂರಿಗೆ ಬರುವಾಗ ನಗರದಲ್ಲಿ ಉಲ್ಬಣಗೊಳ್ಳುವ ಹೆಚ್ಚಿನ ಅವಕಾಶವಿದೆ ಎಂದು ಅವರು ಎಚ್ಚರಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button