ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಿಸಿದ ಚುನಾವಣ ಆಯೋಗ

ಬೆಂಗಳೂರು: ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್‌ ಇಡುತ್ತಾರೆ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣ ಪ್ರಕರಣ ದಾಖಲಿಸಿಕೊಂಡಿದೆ.

ಪ್ರತಿಭಟನಾ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಶೋಭಾ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿಯನ್ನು 48 ಗಂಟೆಯೊಳಗೇ ನೀಡುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣ ಆಯೋಗವು ಸೂಚಿಸಿತ್ತು.ಹೇಳಿಕೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕರಂದ್ಲಾಜೆ ಅವರ ನೀತಿ ಸಂಹಿತೆ ಉಲ್ಲಂಘನೆಯ ಕುರಿತು ಡಿಎಂಕೆ ದೂರಿನ ಕುರಿತು ತತ್ ಕ್ಷಣ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅವರಿಗೆ ಚುನಾವಣ ಆಯೋಗ ನಿರ್ದೇಶನ ನೀಡಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.ಸಿಇಒ ಪ್ರಕಾರ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಕರಂದ್ಲಾಜೆ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಆರ್‌ಪಿ (ಜನಪ್ರತಿನಿಧಿ) ಕಾಯ್ದೆಯ ಸೆಕ್ಷನ್ 123 (3 ಎ), 125 ಮತ್ತು 123 (3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Latest Indian news

Popular Stories