‘ಅನ್ಯಾಯ ಸಾಕು, ನ್ಯಾಯ ಕೊಡಿ ಚೊಂಬೇಶ್ವರ, ಬರ ಪರಿಹಾರ ಬಿಡುಗಡೆ ಮಾಡಿ’: ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಲು ವಿಳಂಬ ಧೋರಣೆ ತಳೆಯುತ್ತಿದೆ, ಈ ಮೂಲಕ ರಾಜ್ಯದ ಜನತೆಗೆ ಅದರಲ್ಲೂ ರೈತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ವಿರುದ್ಧ ಇಂದು ಮಂಗಳವಾರ ವಿಧಾನ ಸೌಧದ ಎದುರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಜನ ವಿರೋಧಿ ಕೇಂದ್ರ ಸರ್ಕಾರಕ್ಕೆ, ರೈತ ವಿರೋಧಿ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ಶಾಸಕರು ಹಾಜರಿದ್ದರು.

ಕರ್ನಾಟಕಕ್ಕೆ ನ್ಯಾಯ ಕೊಡಿ, ಬರ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಚೊಂಬೇಶ್ವರ’ ಎಂದು ಒಕ್ಕೊರಲಿನಿಂದ ಕಾಂಗ್ರೆಸ್ ನಾಯಕರು ಆಗ್ರಹಿಸಿದರು. ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಅಮಿತ್ ಶಾ ಗೋ ಬ್ಯಾಕ್ ಎಂದು ಕೂಗಿದರು.

ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನಿನ್ನೆ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

Latest Indian news

Popular Stories