ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಜಾರಿ ಮಾಡಿದ ಇ.ಡಿ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ ಒಂಬತ್ತನೇ ಸಮನ್ಸ್ ಇದಾಗಿದ್ದು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿ ಮಾಡಿದ್ದ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ಅವರು, ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ 8 ಬಾರಿ ಸಮನ್ಸ್ ನೀಡಿದ್ದರೂ, ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯ ಶನಿವಾರ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು ಎರಡು ದಿನಗಳ ಹಿಂದಷ್ಟೇ ಸಂಸ್ಥೆ ಬಂಧಿಸಿತ್ತು.

Latest Indian news

Popular Stories