ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ- ಕುಮಾರಸ್ವಾಮಿ ಹೇಳಿಕೆ

ಶಿವಮೊಗ್ಗ, ಏಪ್ರಿಲ್ 29: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ (Prajwal Revanna pen drive scandal) ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ, ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ನೀಡಿಲ್ಲ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್​ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆದ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Latest Indian news

Popular Stories