ಹೃದಯ ಶಸ್ತ್ರಚಿಕಿತ್ಸೆ: ಚೆನ್ನೈ ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಟಾರ್ಜ್, ಇಂದು ಬೆಂಗಳೂರಿಗೆ

ಬೆಂಗಳೂರು: ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಟಾರ್ಜ್ ಆಗಲಿದ್ದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್‌ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕುಮಾರಸ್ವಾಮಿಯವರನ್ನು ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರ ಮಾಡಿ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಇಂದು (ಭಾನುವಾರ) ಬೆಳಗ್ಗೆ ಡಿಸ್ಟಾರ್ಜ್ ಆಗುವ ಕುಮಾರಸ್ವಾಮಿ ಅವರು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಜೆ.ಪಿ.ನಗರದ ನಿವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಆಗಮಿಸಿದ ಬಳಿಕ ಕೆಲ ದಿನ ವಿಶ್ರಾಂತಿ ಪಡೆಯುವ ಸಾಧ್ಯತೆ ಇದ್ದು, ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಆಸ್ಪತ್ರೆಯಿಂದ ಆಗಮಿಸುತ್ತಿದ್ದಂತೆ ಜೆಡಿಎಸ್‌ಗೆ ಲಭ್ಯವಾಗಿರುವ ಮೂರು ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Latest Indian news

Popular Stories