ದಕ್ಷಿಣ ಕನ್ನಡ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು

ಮಂಗಳೂರು: ಮನೆಯ ಕಂಪೌಡ್ ತಡೆಗೋಡೆ ಮನೆಯ ಮೇಲೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮನೆಯ ಯಜಮಾನ ಯಾಸಿರ್(45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮಲಗಿದ್ದಲ್ಲಿಯೇ ಮೃತಪಟ್ಟವರು.

ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ. ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು, ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ.
ದೊಡ್ಡಮಗಳು ರಶೀನಾ ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು ಎಂದು ತಿಳಿದು ಬಂದಿದೆ.

Latest Indian news

Popular Stories