ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಂಗಳೂರು: ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ,

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ನಾರಾಯಣಗೌಡ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವಂಥ ಸ್ಥಿತಿಗೆ ಬಂದಿರುವುದೇ ನಾಚಿಕೆಗೇಡು. ಕನ್ನಡಿಗರು ಶಾಂತಿಪ್ರಿಯರಾಗಿರುವ ಕಾರಣ ಅನ್ಯರು ಸವಾರಿ ಮಾಡುತ್ತಿದ್ದಾರೆ. ಕನ್ನಡಿಗರು ಈಗ ಒಂದಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ. ಕನ್ನಡಿಗರ ಹಕ್ಕುಗಳನ್ನು ಹೊರ ರಾಜ್ಯಗಳಿಂದ ಬಂದವರು ಅನುಭವಿಸುತ್ತಿದ್ದು, ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುತ್ತಿದ್ದಾರೆ. ಈಗ ನಾವು ಸಿಡಿದು ನಿಲ್ಲದೇ ಹೋದಲ್ಲಿ ಖಂಡಿತ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದೆ.

ಅದೇ ರೀತಿ ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ರಿದಂತೆ ಅನೇಕ ಕಲಾವಿದರು ಪ್ರತಿಭಟನೆ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕದಲ್ಲಿನ ಉದ್ಯೋಗಗಳ ಮೇಲೆ ಮೊದಲ ಹಕ್ಕು ಮತ್ತು ಆದ್ಯತೆ ಕನ್ನಡಿಗರಿಗೆ ಸಿಗಬೇಕು. ಈ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಪೂಜಾ ಗಾಂಧಿ ಹೇಳಿದ್ದಾರೆ.

Latest Indian news

Popular Stories