Karnataka Heavy Rain: ಒಂದು ವಾರದವರೆಗೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು IMD ಸೂಚನೆ

ಬೆಂಗಳೂರು: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆಯನ್ನು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಸಾಗುವ ಮುಂಗಾರು ಮಾರುತದಿಂದ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ಭಾರಿ ಮಳೆಯಾಗಲಿದೆ ಎಂದು IMD ಮಾಹಿತಿ ನೀಡಿದೆ.

ಗುರುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಇದೇ ಪರಿಸ್ಥಿತಿ ಮುಂದುವರೆಯುವ ನಿರೀಕ್ಷೆಯಿದೆ. ನಂತರ ಕ್ರಮೇಣ ತೀವ್ರತೆಯು ಕಡಿಮೆಯಾಗಲಿದೆ. ಆದಾಗ್ಯೂ ಹಗುರ, ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೆಳಗಾವಿ, ಧಾರವಾಡದಲ್ಲೂ ಭಾರಿ ಮಳೆ: ಉತ್ತರ ಒಳನಾಡಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜುಲೈ 3 ಮತ್ತು 4 ರಂದು ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡದಲ್ಲೂ ಭಾರಿ ಮಳೆ ನಿರೀಕ್ಷೆಯಿದೆ. ಇನ್ನೂ ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂಗಾರು ಅವಧಿಯುದ್ದಕ್ಕೂ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆ ನಿರೀಕ್ಷೆ

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ನಿರೀಕ್ಷಿಸಲಾಗಿದೆ. ಇತರ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಜುಲೈ 7 ರಿಂದ ರಾಜ್ಯಾದ್ಯಂತ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಜುಲೈ 9 ರವರೆಗೆ ಮುಂದುವರಿಯಬಹುದು ಎನ್ನಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ, ಗರಿಷ್ಠ 27, ಕನಿಷ್ಠ 20 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.

ಕಟ್ಟೆಚ್ಚರಕ್ಕೆ ಹವಾಮಾನ ಇಲಾಖೆ ಸೂಚನೆ:

ಪ್ರವಾಹ, ಭೂಕಿಸಿತದಂತಹ ಪ್ರದೇಶಗಳಲ್ಲಿರುವ ಜನರು ಕಟ್ಟೆಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಪರಿಸ್ಥಿತಿಯನ್ನು ಇಲಾಖೆ ಸೂಕ್ಷ್ಮವಾಗಿ ಪರಿಶಿಲಿಸುತ್ತಿದ್ದು,ನಿಯಮಿತವಾಗಿ ಸಲಹೆಗಳನ್ನು ನೀಡುತ್ತಿರುವುದಾಗಿ ಹವಾಮಾನ ಇಲಾಖೆ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ.

Latest Indian news

Popular Stories