- ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ರಾಜ್ಯದ ಹಲವೆಡೆ ಸಂಭವಿಸಿದ ಗುಡ್ಡ ಕುಸಿತಗಳಿಂದ ಎಚ್ಚೆತ್ತುಕೊಂಡಿರುವ ಕೊಡಗು ಜಿಲ್ಲಾಡಳಿತ ಸಂಭಾವ್ಯ ಭೂಕುಸಿತದ ಪ್ರದೇಶಗಳನ್ನು ಪಟ್ಟಿ ಮಾಡಿದ್ದರ ಜತೆಗೆ, ಆ ಭಾಗದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದೆ. ಸಾವಿರಾರು ಕುಟುಂಬಗಳಿಗೆ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.
ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.
ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಯಿತು. ಶೀಘ್ರದಲ್ಲೇ ಸ್ಥಳಾಂತರ ಆಗಬಹುದು ಎಂದು ಮೂಲಗಳು ತಿಳಿಸಿವೆ.
ಜಿಲ್ಲಾಡಳಿತ ಸದ್ಯ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಅಲ್ಲಿ 200 ಕ್ಕೂ ಹೆಚ್ಚು ನಿವಾಸಿಗಳು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ.
ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ಈ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಹಲವೆಡೆ ಭೂಕುಸಿತದ ಆತಂಕ
ಕರ್ನಾಟಕದ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿಯೊಂದು ಇತ್ತಿಚೆಗೆ ಮುನ್ಸೂಚನೆ ನೀಡಿತ್ತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ನಲ್ಲಿ ಮಾಹಿತಿ ನೀಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ಶಿರೂರು ಎಂಬಲ್ಲಿ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದಾದ ನಂತರ ರಾಜ್ಯದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.
ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶ: ಹೆಚ್ಚಿನ ಮಳೆಯಾಗುವ ಸಾದ್ಯತೆ
ಮತ್ತಷ್ಟು ಕಟ್ಟೆಚ್ಚರ ವಹಿಸಲು ಡಿಸಿ ವೆಂಕಟ್ ರಾಜಾ ಸೂಚನೆ
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.
ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.
ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ. ನಿಂದ ಹಣ ಬಿಡುಗಡೆ ಮಾಡಲಾಗುವುದು. ಸರಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ. ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು
ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿರ್ದೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.
ಗುಡ್ಡ ಕುಸಿತ ಪ್ರದೇಶದಲ್ಲಿ ಮುನ್ನೆಚ್ಚರ ಅಗತ್ಯ:
ಹವಾಮಾನ ವೈಪರಿತ್ಯದಿಂದ ಅತಿವೃಷ್ಟಿ ಉಂಟಾಗಿದ್ದು, ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಆಗಸ್ಟ್ ತಿಂಗಳಲ್ಲಿಯೂ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿವಿಲ್ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿದ್ದಾರೆ.
ಅತ್ತೂರು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಸಕರ್ಾರ ಜಿಲ್ಲಾಡಳಿತದ ಜೊತೆ ಸದಾ ಸ್ಪಂದಿಸಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ರಸ್ತೆ, ವಿದ್ಯುತ್ ಪರಿವರ್ತಕ ಮತ್ತು ಕಂಬಗಳು, ಬೆಳೆ ಹಾನಿ ಸೇರಿದಂತೆ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕಂದಾಯ ಸಚಿವರು ವಿವರಿಸಿದರು.
ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿಯುವುದನ್ನು ತಡೆಯುವ ಅಗತ್ಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಲು 300 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದ್ದು, ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕಂದಾಯ ಸಚಿವರು ತಿಳಿಸಿದರು.
ಮುಂಗಾರು ಸಂದರ್ಭದಲ್ಲಿ ರಾಜ್ಯದಲ್ಲಿ ವಿವಿಧ ರೀತಿಯ ರಸ್ತೆ, ವಿದ್ಯುತ್, ಮನೆ, ಗುಡ್ಡ ಕುಸಿತ, ಹೀಗೆ ಹಲವು ರೀತಿಯ ಆಸ್ತಿ ಪಾಸ್ತಿ ಹಾನಿಯಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಜನರು ಸ್ವಯಂ ಪ್ರೇರಣೆಯಿಂದ ಸ್ಥಳಾಂತರವಾಗಬೇಕು. ಜಿಲ್ಲಾಡಳಿತ ಆ ನಿಟ್ಟಿನಲ್ಲಿ ನಿಷ್ಠುರವಾಗಿ ನಡೆದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಸಕರ್ಾರಕ್ಕೆ ಪ್ರಾಣ ಉಳಿಸುವುದು ಮುಖ್ಯ. ಪ್ರಾಣ ಹೋದ ನಂತರ ಪರಿಹಾರ ನೀಡುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರು ಸಹ ಬದಲಾಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಶಾಸಕರಾದ ಡಾ.ಮಂತರ್ ಗೌಡ ಅವರು ವಾಲ್ನೂರು ತ್ಯಾಗತ್ತೂರು ಕಾಳಜಿ ಕೇಂದ್ರ, ಹಾರಂಗಿ ಬಳಿಯ ಅತ್ತೂರು, ನೆಲ್ಲಿಹುದಿಕೇರಿ ಪ್ರವಾಹ ಪೀಡಿತ ಪ್ರದೇಶ, ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರ ಹೀಗೆ ಮಳೆ ಹಾನಿ ಪ್ರದೇಶಗಳಿಗೆ ವೀಕ್ಷಿಸಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಸಕರ್ಾರ ತಮ್ಮ ಜೊತೆಗೆ ಇದೆ. ಆ ನಿಟ್ಟಿನಲ್ಲಿ ಸಕರ್ಾರದ ಜೊತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಂದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ... ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.