ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಮೃತ್ಯು

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.  ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ ಮುಖ ಊದಿಕೊಂಡಿದ್ದು, ಕಳೆದ 14 ದಿನಗಳಿಂದ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಆಪರೇಷನ್ ಕೂಡ ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಅಸುನೀಗಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನು, ಚಿರತೆ ದಾಳಿ ಪ್ರಕರಣ ನಡೆದು ಸುಮಾರು 14 ದಿನಗಳು ಕಳೆದಿದೆ. ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್‌ಗಳನ್ನು ಸಹ ಇಡಲಾಗಿತ್ತು. ಆದರೆ ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮತ್ತೊಂದು ಘಟನೆಯಲ್ಲಿ ವಾಸದ ಮನೆಗೆ ಚಿರತೆ ನುಗ್ಗಿದ ಘಟನೆ ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರು ವಾಸವಾಗಿರುವ ಮನೆಗೆ ಚಿರತೆ ನುಗ್ಗಿದೆ. ಧರ್ಮ ಅವರ ವಾಸದ ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಚಿರತೆ ಮನೆಗೆ ನುಗ್ಗಿದೆ. ನಂತರ ಸ್ಥಳೀಯರ ಮಾಹಿತಿ ಆಧಾರಿಸಿ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂಧಿ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories