ವಿಜಯಪುರ: ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಬಿಟ್ಟಿದೆ ಎಂದರು.