ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಸಾವಿನ ಸಂಖ್ಯೆ 11ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಭೂಪಾಲ್: ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹರ್ದಾ ಕಲೆಕ್ಟರ್ ರಿಷಿ ಗಾರ್ಗ್ ಅವರು ತಿಳಿಸಿದ್ದಾರೆ.

ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿಯ ಕೆನ್ನಾಲಗೆ ಕಾರ್ಖಾನೆ ಒಳಗೆ ಹಾಗೂ ಹೊರಗೆ ವ್ಯಾಪಿಸಿದ್ದು, ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತದೆ.” ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Latest Indian news

Popular Stories