
ಮಂಡ್ಯ ಹನುಮ ಧ್ವಜ ಘರ್ಷಣೆ ವಿವಾದ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ
ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಯುತ್ತಿದೆ.
ಇದರಂತೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ಕಂಡುಬಂದಿತು.
ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಈಗಾಗಲೇ ಪೊಲೀಸರು ಅನುಮತಿ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದ್ದಾರೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟವೂ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಶೋಕ್ ಆಗಮಿಸುವ ಮೊದಲೇ ಪ್ರತಿಭಟನೆ ಮುಗಿದುಹೋಗಿದೆ. ಅಶೋಕ್ ಆಗಮನದ ಮೊದಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ.




