ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಪಾರ್ವತಿ ಅವರನ್ನು ಕರೆಸಿ, ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 25 ರಂದು ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಬಿ.ಎಂ. ಪಾರ್ವತಿ ಹಾಗೂ ಭೂಮಿ ಖರೀದಿಸಿ ಉಡುಗೊರೆ ನೀಡಿದ ಸಿದ್ದರಾಮಯ್ಯ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಭೂಮಿ ಮಾಲೀಕ ದೇವರಾಜು ಮತ್ತು ಇತರರ ವಿರುದ್ಧ ಸೆಪ್ಟೆಂಬರ್ 27 ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಒಂದು ದಿನದ ನಂತರ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿತ್ತು. ಮುಡಾದಲ್ಲಿ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಈ ಎಫ್ ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕೂಡಾ ECIR ದೂರು ದಾಖಲಿಸಿತ್ತು.

Latest Indian news

Popular Stories