ನವದೆಹಲಿ: ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಇದಕ್ಕೂ ಮುನ್ನ ಸಂಸತ್ತು ಭವನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದ್ದು ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದಿದ್ದಾರೆ.
‘ಈ ವಿಷಯ ಕೇಳಿ ನನ್ನ ಹೃದಯ ತುಂಬಾ ನೋವಾಗಿದ್ದು ಸಿಟ್ಟಿನಿಂದ ಕುದಿಯುತ್ತಿದೆ. ನಮ್ಮ ಮುಂದೆ ಬಂದಿರುವ ಮಣಿಪುರದ ಘಟನೆ ಯಾವುದೇ ಸುಸಂಸ್ಕೃತ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ನಾನು ಒತ್ತಾಯಿಸುತ್ತೇನೆ – ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ಮತ್ತು ಬಲವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದು ರಾಜಸ್ಥಾನ ಅಥವಾ ಮಣಿಪುರದ ಛತ್ತೀಸ್‌ಗಢದಲ್ಲಿ ಅಥವಾ ದೇಶದ ಯಾವುದೇ ಮೂಲೆಯಲ್ಲಿ ಯಾವುದೇ ಘಟನೆಯಾಗಿರಲಿ, ರಾಜಕೀಯದಿಂದ ಹೊರಬಂದು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದರು.