ನವದೆಹಲಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಚಟುವಟಿಕೆಯನ್ನು ಬಿರುಸುಗೊಳಿಸಿವೆ ಅಲ್ಲದೆ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲೂ ರಾಜಕೀಯ ಪಕ್ಷಗಳು ನಿರ್ಧಾರ ಕೈಗೊಳ್ಳುತ್ತಿವೆ ಇದರ ನಡುವೆ ಬಿಹಾರದಲ್ಲಿ ‘ಮಹಾಘಟಬಂಧನ್’ ಮೈತ್ರಿಕೂಟದೊಂದಿಗಿನ ಸಂಬಂಧವನ್ನು ಕಡಿದುಕೊಂಡು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ರಚಿಸುವ ಅವರ ಕ್ರಮದ ನಂತರ ಮೊದಲ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಬುಧವಾರ ಪ್ರಧಾನಿ ಅವರನ್ನು ಭೇಟಿಯಾದ ಅವರು ಇನ್ನು ಮುಂದೆ ಯಾವುದೇ ಕಾರಣಕ್ಕೂ ಎನ್‌ಡಿಎ ತೊರೆಯುವುದಿಲ್ಲ ಎಂದು ನಿತೀಶ್ ಕುಮಾರ್ ಪುನರುಚ್ಚರಿಸಿದ್ದಾರೆ.
ಪ್ರಧಾನಿಯವರೊಂದಿಗಿನ ಭೇಟಿಯ ನಂತರ, ನಿತೀಶ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು ಮತ್ತು ಬಿಹಾರಕ್ಕೆ ಸಂಬಂಧಿಸಿದ ಹಲವಾರು ಆಡಳಿತ ಮತ್ತು ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ನಡ್ಡಾ ಅವರು ರಾಜ್ಯದ ಅಭಿವೃದ್ಧಿ ಮತ್ತು ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಿತೀಶ್ ಕುಮಾರ್ ಅವರೊಂದಿಗೆ ರಚನಾತ್ಮಕ ಚರ್ಚೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.
ಅಲ್ಲದೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ X ನಲ್ಲಿ ಪೋಸ್ಟ್ ಹಾಕಿದ ನಿತೀಶ್ ಕುಮಾರ್ “ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರವು ಅಭಿವೃದ್ಧಿಯ ಹೊಸ ಎತ್ತರಗಳನ್ನು ಮುಟ್ಟಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ,” ಎಂದು ಅವರು ಬರೆದುಕೊಂಡಿದ್ದಾರೆ.