ಪ್ರಜ್ವಲ್ ರೇವಣ್ಣ ವಿಡಿಯೋ ಹಂಚಿಕೆ, ಇಬ್ಬರ ಬಂಧನ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋ ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಂಗಳವಾರ ಸೆಕ್ಸ್ ಹಗರಣದ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಂಚಿದ್ದ ಆರೋಪ ಎದುರಿಸುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆಯುವ ನಿಟ್ಟಿನಲ್ಲಿ ಹೈಕೋರ್ಟ್‌ಗೆ ಬಂದಾಗ ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ನವೀನ್ ಗೌಡ ಮತ್ತು ಚೇತನ್ ಎಂದು ಗುರುತಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್‌ಗಳನ್ನು ಬಂಧಿತ ಚೇತನ್ ಗೌಡ ಮತ್ತು ನವೀನ್ ಗೌಡ ಹಂಚಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆರೋಪದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ರಾಜ್ಯ ಸರ್ಕಾರವು ಪ್ರಕರಣದ ತನಿಖಾ ಜವಾಬ್ದಾರಿಯನ್ನು ಏಪ್ರಿಲ್ 28 ರಂದು ಎಸ್‌ಐಟಿಗೆ ವಹಿಸಿತ್ತು.

ಹಾಲಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ 33 ವರ್ಷದ ಪ್ರಜ್ವಲ್, ಮತದಾನದ ಒಂದು ದಿನದ ನಂತರ ಏಪ್ರಿಲ್ 27 ರಂದು ದೇಶವನ್ನು ತೊರೆದಿದ್ದರು. ಬಳಿಕ ಅವರ ಅಶ್ಲೀಲ ವಿಡಿಯೋಗಳ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಹಲವು ಬಾರಿ ವಿಚಾರಣೆಗೆ ಹಾಜರಾಗಲು ಸಮನ್ಸ್‌ಗಳನ್ನು ನೀಡಿದೆಯಾದರೂ, ಪ್ರಜ್ವಲ್ ರೇವಣ್ಣ ವಿಚಾರಣೆಯಿಂದ ಸತತವಾಗಿ ತಪ್ಪಿಸಿಕೊಂಡಿದ್ದಾರೆ.

ಇದೀಗ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ಕೂಡ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ.

Latest Indian news

Popular Stories