ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2022ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 21 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

Latest Indian news

Popular Stories