ಕರಾವಳಿಯಲ್ಲಿ ಐದು ದಿನ ಭಾರೀ ಮಳೆ ಸಾಧ್ಯತೆ

ಕರಾವಳಿ ಭಾಗಕ್ಕೆ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಗುಡುಗು ಸಮೇತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಮಂಗಳವಾರ ಮತ್ತು ಬುಧವಾರ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ, ಐದನೇ ದಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಕೆಲ ಭಾಗಕ್ಕೆ ಎರಡು ದಿನ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Latest Indian news

Popular Stories