ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ: ಸಿದ್ಧತೆ ಪರಿಶೀಲಿಸಿದ ಸಿಎಂ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ಅತಿವೃಷ್ಟಿಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು(ಡಿಸಿ) ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಬರ ಪರಿಹಾರ ಚಟುವಟಿಕೆಗಳ ಜೊತೆಗೆ ಮುಂಗಾರು ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಕೆಲವೆಡೆ ಶೇ.40 ಹಾಗೂ ಕೆಲವೆಡೆ ಶೇ.50 ಅಥವಾ ಶೇ.60ರಷ್ಟು ಮಳೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಬಿತ್ತನೆಯೂ ಆರಂಭವಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅತಿಹೆಚ್ಚು ಮಳೆ ಕಾಣುವ ರಾಜ್ಯದ ಪ್ರದೇಶಗಳಲ್ಲಿ ಪ್ರವಾಹಗಳು ಉಂಟಾಗುವ ಪರಿಸ್ಥಿತಿ ತಲೆದೋರಿದರೆ ಅದನ್ನು ಎದುರಿಸಲು ಜಿಲ್ಲಾಡಳಿತಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಬೇಕು ಎಂದರು.

ಮುಂಜಾಗ್ರತಾ ಕ್ರಮವಾಗಿ, ಹೂಳೆತ್ತ್ತುವ ಕೆಲಸ ಅರಂಭಿಸಿ ನೀರು ಸರಾಗವಾಗಿ ಕೆರೆಕುಂಟೆಗಳಿಗೆ ಹರಿದುಹೋಗುವಂತೆ ಮಾಡುವುದು, ನದಿ ನೀರುಹರಿವಿಗೆ ಅಡೆತಡೆಗಳು ಉಂಟಾಗಿದ್ದರೆ ಅವುಗಳನ್ನು ನಿವಾರಿಸುವುದು-ಒಟ್ಟಿನಲ್ಲಿ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿತ್ತನೆ ಅವಧಿ ಆರಂಭವಾಗುತ್ತಿದ್ದಂತೆ ರಾಜ್ಯಾದ್ಯಂತ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೂನ್‌ನಿಂದ ರಾಜ್ಯಾದ್ಯಂತ ಸುಮಾರು 80 ಲಕ್ಷ ಹೆಕ್ಟೇರ್‌ನಲ್ಲಿ ನಿಯಮಿತ ಖಾರಿಫ್ ಬಿತ್ತನೆ ಆರಂಭವಾಗಲಿದೆ ಎಂದರು.

ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೇ ಹೊಣೆಗಾರರಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ಇನ್ನು ಬರ ಪರಿಹಾರಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರ ಸುಮಾರು 34 ಲಕ್ಷ ರೈತರಿಗೆ ತಲಾ 2,000 ರೂ.ಗಳನ್ನು ನೀಡಿದೆ ಮತ್ತು ಕೇಂದ್ರದಿಂದ 3,454 ಕೋಟಿ ರಾಷ್ಟ್ರೀಯ ವಿಪತ್ತು ನಿಧಿ(ಎನ್‌ಡಿಆರ್‌ಎಫ್) ಬಂದಿದೆ, ಅದನ್ನು ಹಂಚುವ ಕೆಲಸ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಕೆಲವೆಡೆ ಪರಿಶೀಲನೆಗೆ ಸಂಬಂಧಿಸಿದಂತೆ ಪರಿಹಾರ ವಿತರಣೆಯಲ್ಲಿ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಿ ಶೀಘ್ರ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯ 240 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ ಮತ್ತು ಅವುಗಳಲ್ಲಿ 196 ತೀವ್ರ ಪೀಡಿತ ಎಂದು ವರ್ಗೀಕರಿಸಲಾಗಿದೆ ಎಂದರು.

Latest Indian news

Popular Stories